ಕುಕ್ಕೆ ಕ್ಷೇತ್ರ ಪ್ಲಾಸ್ಟಿಕ್ ಮುಕ್ತಕ್ಕೆ ಕಟ್ಟುನಿಟ್ಟಿನ ಕ್ರಮ: ಸಚಿವ ಖಂಡ್ರೆ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಕ್ಷೇತ್ರಕ್ಕೆ ಸಂಪರ್ಕಿಸುವ ನಾಲ್ಕು ಪ್ರಮುಖ ರಸ್ತೆಗಳಲ್ಲಿ ತಪಾಸಣ ಕೇಂದ್ರ ಸ್ಥಾಪಿಸಿ ಏಕಬಳಕೆ ಪ್ಲಾಸ್ಟಿಕ್ ಸಾಗಾಟ ತಡೆಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ದೇವಸ್ಥಾನಕ್ಕೆ ಆಗಮಿಸುವ ಮಾರ್ಗಗಳ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿರುವುದು ಗಮನಕ್ಕೆ ಬಂದಿದ್ದು, ಪರಿಸರ ಸಂರಕ್ಷಣೆ ದೃಷ್ಟಿಯಿಂದ ಎರಡು ಹಂತಗಳ ತಪಾಸಣ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.
ನದಿಗಳಿಗೆ ತ್ಯಾಜ್ಯ ನೀರು: ಕಠಿನ ಕ್ರಮ ಕುಮಾರಧಾರಾ ಸಹಿತ ದೇವಸ್ಥಾನದ ಸುತ್ತಮುತ್ತಲಿನ ನದಿಗಳಿಗೆ ತ್ಯಾಜ್ಯ ನೀರು ಹರಿಸಲಾಗುತ್ತಿರುವ ಕುರಿತು ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪರಿಸರ ಇಲಾಖೆಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ತ್ಯಾಜ್ಯ ನೀರನ್ನು ಸಂಸ್ಕರಿಸದೆ ನದಿಗೆ ಹರಿಸುವ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಸ್ಥಳೀಯ ಆಡಳಿತಗಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿವೆ. ಎಲ್ಲ ತ್ಯಾಜ್ಯ ಉತ್ಪಾದನ ಸಂಸ್ಥೆಗಳು ಕಡ್ಡಾಯವಾಗಿ ತ್ಯಾಜ್ಯ ನೀರು ಸಂಸ್ಕರಣ ಘಟಕಗಳನ್ನು ಹೊಂದಿರಬೇಕು ಎಂದರು.
ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಸರಕಾರ ಗಂಭೀರ ಕ್ರಮ ಕೈಗೊಂಡಿದೆ. ಆನೆ, ಚಿರತೆಗಳ ಚಲನವಲನ ಪತ್ತೆಗಾಗಿ ಡ್ರೋನ್ ಸಹಿತ ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತಿದ್ದು, ಕಮಾಂಡ್ ಕೇಂದ್ರ ಸ್ಥಾಪಿಸಲಾಗಿದೆ. ಕುಕ್ಕೆ ಕ್ಷೇತ್ರದ ಸುತ್ತಮುತ್ತ ಆನೆ ಹಾವಳಿ ತಡೆಗೆ ಆನೆಕಂದಕ ನಿರ್ಮಾಣ ಹಾಗೂ ಸೋಲಾರ್‌ಬೇಲಿ ಅಳವಡಿಸುವ ಕಾರ್ಯ ಕೈಗೊಳ್ಳಲಾಗುವುದು. ಚಿರತೆ ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಬೋನು ಅಳವಡಿಸಲು ಸೂಚನೆ ನೀಡಲಾಗಿದೆ. ಮಾನವ ಜೀವ ರಕ್ಷಣೆ ಸರಕಾರದ ಮೊದಲ ಆದ್ಯತೆ ಎಂದರು.